ಮುಂಬೈ: ‘ಲವ್ ಜಿಹಾದ್’ ವಿರುದ್ಧ ಕಾನೂನು ರೂಪಿಸಲು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಏಳು ಸದಸ್ಯರ ವಿಶೇಷ ಸಮಿತಿಯನ್ನು ನೇಮಕ ಮಾಡಿದೆ. ಡಿಜಿಪಿಯವರ ಹೊರತಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ, ಕಾನೂನು ಮತ್ತು ನ್ಯಾಯಾಂಗ ಇಲಾಖೆ, ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಇಲಾಖೆಗಳಿಂದ ತಲಾ ಒಬ್ಬರು ಪ್ರತಿನಿಧಿಗಳು ಹಾಗೂ ಗೃಹ ಇಲಾಖೆಯಿಂದ ಇಬ್ಬರು ಪ್ರತಿನಿಧಿಗಳು ಈ ಸಮಿತಿಯಲ್ಲಿ ಇರಲಿದ್ದಾರೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸರ್ಕಾರದ ಪ್ರಕಟಣೆಯಲ್ಲಿ ‘ಲವ್ ಜಿಹಾದ್’ ಎಂಬ ಪದವನ್ನು ಬಳಸಲಾಗಿದೆ.
ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಈ ರೀತಿಯ ಕಾನೂನುಗಳನ್ನು ಜಾರಿಗೆ ತಂದ ನಂತರ, ಮಹಾರಾಷ್ಟ್ರ ಸರ್ಕಾರವೂ ಸಹ ಮತಾಂತರ ಮತ್ತು ಅಂತರ್ ಧರ್ಮೀಯ ವಿವಾಹಗಳ ಪ್ರಕ್ರಿಯೆಯಲ್ಲಿ ಬಲವಂತದ ಧಾರ್ಮಿಕ ಮತಾಂತರವನ್ನು ತಡೆಹಿಡಿಯಲು ಕಾನೂನುಗಳನ್ನು ರೂಪಿಸುವುದಕ್ಕಾಗಿ ಯೋಜನೆ ಹಾಕಿಕೊಂಡಿತ್ತು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.