ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮೃತ ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿಯಾಗಿದ್ದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಈ ಕುರಿತು ಜಯಲಲಿತಾ ಅವರ ವಾರಸುದಾರಾದ ಜೆ. ದೀಪಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿದ ನಂತರ ಈ ಆದೇಶವನ್ನು ಹೊರಡಿಸಿದೆ.
ಈ ಒಡವೆ, ಕಳೆದ ವರ್ಷ ಮಾರ್ಚ್ 6 ಮತ್ತು 7ರಂದು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರವಾಗಬೇಕಾಗಿತ್ತು. ಆದರೆ, ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾಗುತ್ತಿದೆಯೆಂದು ಜಯಲಲಿತಾ ಅವರ ವಾರಸುದಾರಾದ ಜೆ. ದೀಪಾ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಅವರು ತಮ್ಮ ಅರ್ಜಿಯಲ್ಲಿ ಬೇಡಿಕೆ ಇಟ್ಟಿದ್ದರು. ಇದಕ್ಕೆ ಎಸ್.ಪಿ.ಪಿ. ಕಿರಣ್ ಜವಳಿ ತಮಿಳುನಾಡು ಸರಕಾರದ ಪರ ಆಕ್ಷೇಪಣೆ ಸಲ್ಲಿಸಿದ್ದರು. ಹಿರಿಯ ವಕೀಲ ಸಂದೇಶ್ ಚೌಟ್ ಅವರು ಸರ್ಕಾರದ ಪರ ವಾದ ಮಂಡನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಕರ್ನಾಟಕ ಹೈಕೋರ್ಟ್ ಜೆ. ದೀಪಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿದೆ.