ಹೊಸದಿಲ್ಲಿ: ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿರುವುದನ್ನು ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಸ್ವಾಮಿ, “ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ʼಭಾರತವನ್ನು ಆಹ್ವಾನಿಸಲಾಗಿದೆʼ ಎಂದು ಭಾರತೀಯ ಮಾಧ್ಯಮಗಳು ವರದಿ ಮಾಡಿದ ಸುದ್ದಿಯನ್ನು ನೋಡಿ ನನ್ನ ಅಮೆರಿಕದ ಸ್ನೇಹಿತರು ನಗುತ್ತಿದ್ದಾರೆ. ವೇಟರ್‌ಗೆ ಆಹ್ವಾನ ನೀಡಲಾಗಿದೆ, ಆದರೆ ಪ್ರಧಾನಿಗೆ ಆಹ್ವಾನ ನೀಡಲಾಗಿಲ್ಲ! ಇದು ಇನ್ನೂ ದೊಡ್ಡ ಅವಮಾನವಲ್ಲವೇ?” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಿಗೆ ಆಹ್ವಾನ ತರಲು ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಅಮೆರಿಕಕ್ಕೆ ಕಳುಹಿಸಲಾಗಿತ್ತು. ಡಿಸೆಂಬರ್ 24 ರಿಂದ 29 ನಡುವೆ ಜೈಶಂಕರ್ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ವಾಮಿ, “ಮೋದಿ ಅವರು ವೇಟರ್ ಅವರನ್ನು ಅಮೆರಿಕಕ್ಕೆ ಕಳುಹಿಸಿ, ತಮಗೆ ಆಹ್ವಾನವನ್ನು ತರುವಂತೆ ಹೇಳಿದ್ದಾರೆ, ಇಲ್ಲದಿದ್ದರೆ ಅವರು ತಮ್ಮ ಕೆಲಸವನ್ನು ಕಳೆದುಕೊಳ್ಳಲಿದ್ದಾರೆ. ಆದರೆ ಪ್ರಸ್ತುತ, ಡೊನಾಲ್ಡ್ ಟ್ರಂಪ್ ಅವರು ಮೋದಿಯನ್ನು ಆಹ್ವಾನಿಸುವ ಮನಸ್ಥಿತಿಯಲ್ಲಿ ಇಲ್ಲ” ಎಂದು ಆ ಸಂದರ್ಭದಲ್ಲಿ ಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.