ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣವೆಂದು ಆರೋಪಿಸಿ ಪೋಸ್ಟರ್ ಅಂಟಿಸಿದ ಪ್ರಕರಣದಲ್ಲಿ 13 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ, ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪಾತ್ರವಿದೆ ಎಂದು ಆರೋಪಿಸಿ ಘೋಷಣೆ ಕೂಗಿ, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿದ ಪ್ರಕರಣದಲ್ಲಿ ಮೂವರು ವಿಧಾನ ಪರಿಷತ್ ಸದಸ್ಯರು ಸೇರಿದಂತೆ 13 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಫ್ ಐ ಆರ್ ನಲ್ಲಿರುವ ಮುಖ್ಯ ಹೆಸರುಗಳು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸದಸ್ಯರುಗಳಾದ ಸಿ.ಟಿ. ರವಿ ಮತ್ತು ರವಿಕುಮಾರ್. ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ಹಾಗೂ ಹಲವು ಬಿಜೆಪಿ ಮುಖಂಡರು ಇದರಲ್ಲಿ ಸೇರಿದ್ದಾರೆ.
ಹೈಗ್ರೌಂಡ್ಸ್ ಠಾಣೆಯ ಪಿಎಸ್ಸೈ ಶಶಿಧರ್ ವಣ್ಣೂರು ನೀಡಿದ ದೂರಿನ ಮೇರೆಗೆ, ಈ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಸ್ವತ್ತಿಗೆ ಹಾನಿ ಹಾಗೂ ನಗರ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡಿದ ಆರೋಪದಡಿ ಎಫ್ ಐ ಆರ್ ಮಾಡಲಾಗಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸರ್ಕಾರ ಕಾರಣವೆಂದು ಆರೋಪಿಸಿ ಡಿಸೆಂಬರ್ 31ರಂದು ಬೆಂಗಳೂರಿನಲ್ಲಿನ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದ್ದರು.